ಶ್ರೀನಿವಾಸಪುರ: ತಾಲೂಕಿನ ಕಂದಾಯ ಹಾಗು ಪೋಲಿಸ್ ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುತ್ತಿದ್ದು,ಕಂದಾಯ ಇಲಾಕೆ ಅಧಿಕಾರಿಗಳ ಕಾರ್ಯವೈಖರಿ ಪೊಲೀಸ್ ಅಧಿಕಾರಿಗಳ ದುಂಡಾವರ್ತನೆಗೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಶಾಸಕ ವೆಂಕಟಶಿವಾರೆಡ್ಡಿ ಅವರ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವೆಂಕಟಶಿವಾರೆಡ್ಡಿ ಕೆಲವರ ಮಾತಿಗೆ ಮಣಿದು ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು . ತಾಲೂಕಿನ ಕೆಲವು ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಸಾರ್ವಜನಿಕರನ್ನು ರಾಜಕೀಯವಾಗಿ ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳ ಇಂತಹ ದುರಾಡಳಿತದಿಂದ ಸಾಮಾನ್ಯ ಜನರು ಅನಗತ್ಯ ತೊಂದರೆ ಅನುಭವಿಸುವಂತಾಗಿದೆ. ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ, ಕ್ಷೇತ್ರದ ಅಭಿವೃದ್ದಿಯಾಗುತ್ತಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಹಾಗೂ ಮಾಜಿ ಸಚಿವ ರಮೇಶ್ ಕುಮಾರ್ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಶಾಸಕ ವೆಂಕಟಶಿವಾರೆಡ್ಡಿ, “ಆ ಮನುಷ್ಯ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಆಗಿ, ಸಚಿವರಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡಿದ್ದಾರೆ? ಜನರಿಗೆ ಏನು ಕೊಡುಗೆ ನೀಡಿದ್ದಾರೆ? ನಾನು ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಲು ಮುಂದಾದರೆ ಅದಕ್ಕೂ ಅಡ್ಡಗಾಲು ಹಾಕುತ್ತಾರೆ ಎಂದು ಆರೋಪ ಮಾಡಿದರು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುವ ರಾಜಕೀಯ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳೆ ಎಚ್ಚರ
ಅಧಿಕಾರಿಗಳು ರಾಜಕೀಯ ಒತ್ತಡಗಳಿಗೆ ಮಣಿಯದೆ ಕಾನೂನು ಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು. ಜನಸಾಮಾನ್ಯರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮುಂದಾಗಬೇಕು, ಇಂತಹ ಅಧಿಕಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ಸಲ್ಲಿಸಲಾಗಿದೆ. ಅಲ್ಲದೆ, ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೂ ಸಮಸ್ಯೆಯನ್ನು ತರಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ದೂರು ಸಲ್ಲಿಸಿದರೂ ಅಧಿಕಾರಿಗಳ ವರ್ತನೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಶಾಸಕ ವೆಂಕಟಶಿವಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೋಲಾರ ಸಂಸದ ಮಲ್ಲೇಶ್ ಬಾಬು ಮಾತನಾಡಿ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಇಂತಹ ಸರ್ಕಾರವನ್ನು ನಾನು ಇದುವರಿಗೂ ನೋಡಿಲ್ಲ, ಜನರ ಸಮಸ್ಯೆಗಳಿಗೆ ಸ್ಪಂದನೆ ಇಲ್ಲ, ಶಾಸಕರ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎನ್ನುವುದಾದರೆ ರಾಜ್ಯದ ಪರಿಸ್ಥಿತಿ ಬಗ್ಗೆ ನೀವೇ ಊಹಿಸಿಕೊಳ್ಳಿ ಎಂದ ಅವರು ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಎನ್ ಡಿ ಎ ಸರ್ಕಾರ ಬರಲಿದೆ, ಡಬಲ್ ಇಂಜಿನ್ ಸರ್ಕಾರ ಬರುತ್ತದೆ ದುರಾಡಳಿತ ನಡೆಸುತ್ತಿರುವ ಅಧಿಕಾರಿಗಳಿಗೆ ಬುದ್ದಿ ಕಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳ ನಡವಳಿಕೆ ಬದಲಾಗದಿದ್ದರೆ ಬೆಳಗಾವಿಯಲ್ಲಿ ನಡೆಯುವ ಸಧನದಲ್ಲೂ ವಿಷಯ ಪ್ರಸ್ತಾವಿಸುತ್ತೇನೆ ಅಗತ್ಯ ಬಿದ್ದರೆ ಸದನದ ಬಾವಿಗಿಳಿದು ಪ್ರತಿಭಟನೆ ಮಾಡುವುದಾಗಿ ಆಕ್ರೋಶ ಭರಿತರಾಗಿ ನುಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಆಡಳಿತ ವ್ಯವಸ್ಥೆಯೇ ಪ್ರಭಾವಿಗಳ ಒತ್ತಡಕ್ಕೆ ಒಳಗಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಮಾಜಿ ಸದಸ್ಯ ಇಂದಿರಾಭವನ್ ರಾಜಣ್ಣ,ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸಪ್ಪ ಮುನಿಯಪ್ಪ ಸಿ.ರವಿ ಕೂಟ್ರಗೂಳಿವೆಂಕಟ್ರಾಮಿರೆಡ್ಡಿ, ಆಟೋಜಗದೀಶ್, ತೂಪಲ್ಲಿಮಧು, ಸುಧಾಕರ್, ಭೀಮಗುಂಟಪಲ್ಲಿ ಶಿವಾರೆಡ್ಡಿ, ರೋಣೂರುಚಂದ್ರು ಕೋಲಾರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಡಾ.ವೇಣುಗೋಪಾಲ್, ,ಚಿರುವುನಹಳ್ಳಿ ಲಕ್ಷ್ಮಣಗೌಡ,ನಾಗಬೂಷಣ್ ನಿಲಟೂರುಚಿನ್ನಪ್ಪರೆಡ್ಡಿ ಹೂವಳ್ಳಿಕೃಷ್ಣಪ್ಪ, ವೆಂಕಟೇಶ್,ಸೇರಿದಂತೆ ದೊಡ್ಡ ಸಂಖ್ಯೆಯಲ್ಲಿ ಮುಖಂಡರು ಕಾರ್ಯಕತರು ಭಾಗವಹಿಸಿದ್ದರು.



