ಹಾಸನ:ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಘೋರ ಅಪಘಾತದಲ್ಲಿ ಕ್ಯಾಂಟರ್ ಹರಿದು 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ ಈಗ 10ಕ್ಕೆ ಏರಿಕೆಯಾಗಿದೆ.20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದೀಗ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವಯ್ಯನ ಕೊಪ್ಪಲು ಗ್ರಾಮದ ಚಂದನ್ (26) ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ ಮುಖ್ಯಮಂತ್ರಿ. ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಗಿದೆ ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
ಜೆಡಿಎಸ್ ದೇವೇಗೌಡರಿಂದಲೂ ಪರಿಹಾರ
ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 10 ಮಂದಿ ಸಾವನ್ನಪ್ಪಿರುವ ದುರ್ಘಟನೆಯಲ್ಲಿ ಮೃತ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ.ಮೃತರಿಗೆ ತಲಾ 1 ಲಕ್ಷ ಪರಿಹಾರ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ಹಾಗು ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ವೀಲ್ ಛೇರ್ ನಲ್ಲಿ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು.
ಪ್ರಧಾನಿ ಸಾಂತ್ವನ
ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಪ್ರಧಾನಿ ಮೋದಿ, ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಮೃತರಲ್ಲಿ ಯುವಕರೆ ಹೆಚ್ಚು
ಗಣೇಶ ವಿಸರ್ಜನೆಯ ಸಂಭ್ರಮದಲ್ಲಿದ್ದವರ ಮೇಲೆ ರಕ್ಕಸನಂತೆ ನುಗ್ಗಿದ್ದ ಟ್ರಕ್ ವಿದ್ಯಾರ್ಥಿಗಳು ಸೇರಿ 10 ಜನರನ್ನು ಬಲಿ ಪಡೆದಿದೆ. ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ ಭೀಕರ ಅಂತ್ಯವಾಗಿದೆ. ಮಕ್ಕಳ ಕಳೆದುಕೊಂಡ ಹೆತ್ತವರ ಕಣ್ಣೀರ ಕೋಡಿ ಒಡೆದಿದೆ. ಮೃತಪಟ್ಟ ಒಬ್ಬೊಬ್ಬರದು ಒಂದೊಂದು ಕಣ್ಣೀರ ಕಥೆಯಾಗಿದೆ.



