ಶ್ರೀನಿವಾಸಪುರ: ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ನಿವಾಸಿ, ನಿವೃತ್ತ ಶಿಕ್ಷಕ ಎಸ್.ಆರ್. ವೆಂಕಟೇಶ್ ರಾವ್ (SRV) (85) ಅವರು ತಮ್ಮ ಸ್ವಗೃಹದಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ರಾಯಲ್ಪಾಡು, ಸೋಮಯಾಜಲಹಳ್ಳಿ ಹೈಸ್ಕೂಲ್ ಹಾಗೂ ಬಳಿಕ ಶ್ರೀನಿವಾಸಪುರದ ಬಾಲಕಿಯರ ಕಾಲೇಜಿನಲ್ಲಿ ಗಣಿತಶಾಸ್ತ್ರ ಮತ್ತು ವಿಜ್ಞಾನ ಬೋಧಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.ನಂತರದಲ್ಲಿ ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಹೈಸ್ಕೂಲಿಗೆ ವರ್ಗಾವಣೆ ಗೋಂಡು ಅಲ್ಲಿಯೇ ನಿವೃತ್ತರಾಗಿದ್ದರು.
SRV ಮೇಷ್ಟ್ರು ಎಂದೆ ಖ್ಯಾತರಾಗಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸರಳತೆ, ಶಿಸ್ತು, ಸೇವಾ ಮನೋಭಾವ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಅವರು, ಹಲವು ತಲೆಮಾರುಗಳ ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದರು. ಶಿಕ್ಷಣ ಕ್ಷೇತ್ರದಿಂದ ನಿವೃತ್ತರಾದ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಸೋಮಯಾಜಲಹಳ್ಳಿ ಭಾಗದ ಜನರ ಸಾಮಾಜಿಕ ಆರ್ಥಿಕ ಉನ್ನತಿಗಾಗಿ ಗ್ರಾಮದ ರೇಶ್ಮೆ ಬೆಳೆಗಾರರ ಮತ್ತು ರೈತರ ಸೇವಾ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸಿದ್ದರು ಎನ್ನುತ್ತಾರೆ ಗ್ರಾಮಸ್ಥರು.

ಅವರ ನಿಧನದ ಸುದ್ದಿ ತಿಳಿದು ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು, ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್.ಆರ್. ವೆಂಕಟೇಶ್ ರಾವ್ (SRV) ಅವರ ನಿಧನದಿಂದ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಅವರನ್ನು ಬಲ್ಲವರಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಹಾರೈಸೋಣ.



